Updated By: Priyalachhi

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮಹಾಸಭಾದ ಕಚೇರಿಯಲ್ಲಿ ಇಂದು ನಡೆದ ಕಾರ್ಯಕಾರಣಿ ಸಭೆಯಲ್ಲಿ ತಗೆದುಕೊಂಡ ನಿರ್ಣಯದಂತೆ ಯಾವುದೇ ಚುನಾವಣೆ ಇಲ್ಲದೇ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸಚಿವ ಈಶ್ವರ ಖಂಡ್ರೆಯವರನ್ನು ಆಯ್ಕೆ ಮಾಡಲು ಕಾರ್ಯಕಾರಣಿ ಸಭೆಯಲ್ಲಿ ಒಮ್ಮತದಿಂದ ನಿರ್ಣಯ ತಗೆದುಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷರಾದ ನಿವೃತ್ತ ಡಿಜಿಪಿ ಶಂಕರ ಬಿದರಿ ತಿಳಿಸಿದ್ದಾರೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಮಹಾಸಭಾದ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲು ಎಲ್ಲ ಸದಸ್ಯರೂ ಒಮ್ಮತ ವ್ಯಕ್ತಪಡಿಸಿದ್ದರಿಂದ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು ಎಂದು ಬಿದರಿಯವರು ಹೇಳಿದ್ದಾರೆ.

ಸಚಿವ ಈಶ್ವರ ಖಂಡ್ರೆಯವರು ಕಳೆದ 13 ವರ್ಷಗಳಿಂದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ಒಂದು ವರ್ಷದಿಂದ ಹಿರಿಯ ಉಪಾಧ್ಯಕ್ಷರ ಪ್ರಭಾರ ಹೊಣೆಯನ್ನೂ ನಿಭಾಯಿಸುತ್ತಿದ್ದರು.

”ವೀರಶೈವ – ಲಿಂಗಾಯತ” ಒಂದೇ: ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ ಅವರು ತಮ್ಮನ್ನು ಆಯ್ಕೆ ಮಾಡಿದ್ದಕ್ಕಾಗಿ ಕಾರ್ಯಕಾರಿ ಸಮಿತಿಗೆ ಧನ್ಯವಾದ ಅರ್ಪಿಸಿದರು.

ವೀರಶೈವ ಮತ್ತು ಲಿಂಗಾಯತ ಎರಡೂ ಬೇರೆ ಬೇರೆಯಲ್ಲ. ಒಂದೇ ಸಮುದಾಯ ಎನ್ನುವುದು ತಮ್ಮ ಪ್ರತಿಪಾದನೆಯಾಗಿದೆ. ಸಮಾಜದ ಎಲ್ಲ ಒಳ ಪಂಗಡಗಳನ್ನು ಒಗ್ಗೂಡಿಸುವುದು ಅತ್ಯಂತ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಶ್ರಮಿಸುವುದಾಗಿ ಅವರು ಭರವಸೆ ನೀಡಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version