Updated By: Priyalachhi

ಬೆಳಗಾವಿ: ಚಳಿಗಾಲದ ಅಧಿವೇಶನದ ಮಧ್ಯೆ ಉತ್ತರ ಕರ್ನಾಟಕ ಭಾಗಕ್ಕೆ ಒಟ್ಟು 3,450 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಬಂಪರ್ ಅನುದಾನ ನೀಡಲಾಗಿದೆ. ಅದರಲ್ಲೂ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಕಲ್ಪಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ಹಾಗೂ ಚಿಕ್ಕೋಡಿ ತಾಲೂಕುಗಳಲ್ಲಿ ಬಾಧಿತ ಅಚ್ಚುಕಟ್ಟಿಗೆ ಕೃಷ್ಣಾ ನದಿಯಿಂದ ನೀರನ್ನು ಎತ್ತಿ, ರಾಯಬಾಗ ಉನ್ನತಮಟ್ಟದ ವಿತರಣಾ ಕಾಲುವೆ (RHLD) ಮತ್ತು ರಾಯಬಾಗ ವಿತರಣಾ ಕಾಲುವೆಗಳಿಗೆ ನೀರು ಹರಿಸುವ 210 ಕೋಟಿ ರೂ.ಗಳ ಮೊತ್ತದ ಏತ ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ.

ಇತ್ತ ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತ್ತು ಬೀಳಗಿ ಮತಕ್ಷೇತ್ರ ವ್ಯಾಪ್ತಿಯಲ್ಲಿನ ಕೆರೂರು ಏತ ನೀರಾವರಿ ಯೋಜನೆಯ 1,503 ಕೋಟಿ ರೂ.ಗಳ ಮೊತ್ತದ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಅದೇ ರೀತಿ, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕೃಷ್ಣಾ ನದಿಯಿಂದ ನೀರನ್ನು ಎತ್ತಿ ಚಿಕ್ಕೋಡಿ ಶಾಖಾ ಕಾಲುವೆಗೆ ನೀರು ಹರಿಸುವ 198.90 ಕೋಟಿ ರೂ.ಗಳ ಅಂದಾಜು ಮೊತ್ತದ ಶ್ರೀ ಕರಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಕೊಟ್ಟಿದೆ.

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಮತ್ತು ಇತರೆ ಪ್ರದೇಶಗಳಿಗೆ ನಾರಾಯಣಪುರ ಬಲದಂಡೆ ಕಾಲುವೆಯಿಂದ ನೀರಾವರಿ ಸೌಲಭ್ಯ ಕಲ್ಪಿಸುವ 990 ಕೋಟಿ ರೂ.ಗಳ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಕೊಡಲಾಗಿದೆ.

ಯಲಬುರ್ಗಾ ಮತ್ತು ಕುಕನೂರು ತಾಲೂಕಿನ ವ್ಯಾಪ್ತಿಯಲ್ಲಿನ 19 ಕೆರೆಗಳಿಗೆ ಕೃಷ್ಣಾ ನದಿಯಿಂದ ನೀರು ತುಂಬಿಸುವ ಯೋಜನೆಯ 272 ಕೋಟಿ ರೂ.ಗಳ ಅಂದಾಜು ಮೊತ್ತದ ಏತ ನೀರಾವರಿ ಯೋಜನೆಗೆ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version