Updated By: Priyalachhi

ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಂಗಳವಾರ ಹೇಳಿದ್ದಾರೆ.

ಬಿಜೆಪಿ ಆರೋಪ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು. ಯಾವುದಾದರೂ ಅಧಿಕಾರಿ ಸಚಿವ ಅಥವಾ ಮುಖ್ಯಮಂತ್ರಿಯ ಹೆಸರನ್ನು ದುರುಪಯೋಗ ಮಾಡಿಕೊಂಡು ಲಂಚ ಪಡೆದಿದ್ದರೆ, ಆ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು. ನಾನು ಯಾವ ತಪ್ಪು ಮಾಡಿದ್ದೇನೆ? ರಾಜೀನಾಮೆ ನೀಡುವ ಅಗತ್ಯವೇನಿದೆ?” ಎಂದು ಪ್ರಶ್ನಿಸಿದರು.

ತಮ್ಮ ಹಾಗೂ ತಮ್ಮ ಪುತ್ರರ ಹೆಸರಿರುವ ಆಡಿಯೋ ಕುರಿತು ಪ್ರತಿಕ್ರಿಯಿಸಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಖರೀದಿಸುವ ಕುರಿತು ಹರಿದಾಡಿದ್ದ ಆಡಿಯೋ ನಂತರ ನಕಲಿ ಎಂದು ಸಾಬೀತಾಗಿದ್ದುದನ್ನು ಉದಾಹರಣೆಯಾಗಿ ನೀಡಿದರು.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪಗಳು ಹೊಸದೇನಲ್ಲ. ಜೆ.ಹೆಚ್. ಪಟೇಲ್, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲೂ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ಇಂತಹ ಆರೋಪಗಳು ಬಂದಿವೆ. ಆದರೆ, ಯಾರೂ ರಾಜೀನಾಮೆ ನೀಡಿಲ್ಲ ಎಂದು ಹೇಳಿದರು.

ಲೋಕಾಯುಕ್ತರಿಗೆ ದೂರು ನೀಡಿದ ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಶನ್ ವಾಸ್ತವವಾಗಿ ಅಸ್ತಿತ್ವದಲ್ಲೇ ಇಲ್ಲ. ಈ ಸಂಘ ಸಾಮಾನ್ಯ ಸಭೆ ನಡೆಸಿಲ್ಲ, ವಾರ್ಷಿಕ ಆಡಿಟ್ ಕೂಡ ಮಾಡಿಲ್ಲ. ಹಾಗಿರುವಾಗ ಅದು ಕಾನೂನಾತ್ಮಕ ಸಂಘವೇ? ಎಂದು ಪ್ರಶ್ನಿಸಿದರು.

ಅಧಿಕಾರಿಗಳ ವರ್ಗಾವಣೆಗೆ ಕೌನ್ಸೆಲಿಂಗ್ ವ್ಯವಸ್ಥೆ, ಸ್ವಂತ ಜಿಲ್ಲೆಯಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಲು ಅವಕಾಶ ನೀಡದಿರುವುದು, ಅಮಾನತುಗೊಂಡ ಅಧಿಕಾರಿಗಳಿಗೆ ಕಾರ್ಯನಿರ್ವಹಣಾ ಹುದ್ದೆ ನೀಡದಿರುವುದು, ಬೆಂಗಳೂರು ನಗರದಲ್ಲಿ ಐದು ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಭ್ರಷ್ಟಾಚಾರ ನಿಯಂತ್ರಣಕ್ಕೆ ಹಿಂದಿನ ಸಚಿವರಿಗಿಂತ ನಾನು ಹಲವು ಸುಧಾರಣೆಗಳನ್ನು ತಂದಿದ್ದೇನೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version