ಶಿವಮೊಗ್ಗ: ಪರಿಶಿಷ್ಟ ಜಾತಿ (ಎಸ್‌ಸಿ)ಗಳ ಒಳಮೀಸಲಾತಿ ಕುರಿತ ಎಜೆ ಸದಾಶಿವ ಸಮಿತಿಯ ವರದಿಯನ್ನು ಜಾರಿಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಂಜಾರ ಸಮುದಾಯದವರು ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ‘ಮೈತ್ರಿ’ ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಹಿಂಸಾಚಾರದ ವೇಳೆ ಓರ್ವ ಪೊಲೀಸ್ ಗಾಯಗೊಂಡಿದ್ದಾರೆ. ಬಿಎಸ್ವೈ ನಿವಾಸದ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ.
ಪಟ್ಟಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಎಸ್ವೈ ಸೇರಿದಂತೆ ಬಿಜೆಪಿ ನಾಯಕರ ಭಾವಚಿತ್ರ ಇರುವ ಪೋಸ್ಟರ್‌ಗಳನ್ನು ಹರಿದು ಸುಟ್ಟು ಹಾಕಿದ್ದಾರೆ. ತಾಲೂಕು ಬಿಜೆಪಿ ಕಚೇರಿ ಹತ್ತಿ ಪಕ್ಷದ ಬಾವುಟವನ್ನು ಕಿತ್ತು ಬಿಸಾಕಿದ್ದಾರೆ. ನಂತರ ಪಟ್ಟಣ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿದರು.
ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಶಿಕಾರಿಪುರಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದು, ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿ ಕಾಪಾಡಲು ಶಿಕಾರಿಪುರ ಪಟ್ಟಣದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಏನಿದು ವಿಚಾರ?
ಮಾರ್ಚ್ 24 ರಂದು ರಾಜ್ಯ ಸರ್ಕಾರ ನಡೆಸಿದ್ದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ)ಗಳ ಒಳಮೀಸಲಾತಿ ಕುರಿತ ಎಜೆ ಸದಾಶಿವ ಸಮಿತಿಯ ವರದಿಯನ್ನು ಜಾರಿಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧಾರ ಮಾಡಲಾಗಿತ್ತು. ಇದರಂತೆ, ಬಂಜಾರ, ಕೊರಚ, ಕೊರಮ, ಭೋವಿ ಸೇರಿದಂತೆ ಪರಿಶಿಷ್ಟ ಜಾತಿಯಡಿ ಬರುವ ಉಪಜಾತಿಗಳಿಗೆ ಒಳಮೀಸಲಾತಿ ಪ್ರಮಾಣ ಕಡಿಮೆಯಾಗಲಿದೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆದಿದೆ.
ಪರಿಶಿಷ್ಟ ಜಾತಿಯಡಿ ಬರುವ ಉಪಜಾತಿಗಳಿಗೆ ಒಳಮೀಸಲಾತಿ ಪ್ರಮಾಣ ಕಡಿಮೆ ಮಾಡಲು ಶಿಫಾರಸು ಮಾಡುವ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿ ಅವೈಜ್ಞಾನಿಕವಾಗಿದ್ದು, ಅದನ್ನು ಕೈಬಿಡಬೇಕೆಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ವರದಿಯು ಪಟ್ಟಭದ್ರ ಹಿತಾಸಕ್ತಿಗಳ ಕುತಂತ್ರವಾಗಿದ್ದು, ಇಷ್ಟು ವರ್ಷ ಶಾಂತಿಯುತವಾಗಿ ಬದುಕುತ್ತಿದ್ದ ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಭಜಿಸುವ ತಂತ್ರವಾಗಿದೆ. ರಾಜ್ಯ ಸರ್ಕಾರದ ಈ ಕ್ರಮದಿಂದ ನಮಗೆ ಅನ್ಯಾಯವಾಗಲಿದೆ. ಶಿಫಾರಸು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು, ಸಚಿವ ಸಂಪುಟ ಸಭೆಯಲ್ಲಿ ಒಬಿಸಿ ಮೀಸಲಾತಿ ಪಟ್ಟಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ. 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲು ಹಾಗೂ ಈ ಮೀಸಲಾತಿಯನ್ನು ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಕ್ಕೆ ತಲಾ ಶೇ. 2ರಷ್ಟು ಹಂಚಿಕೆ ಮಾಡಲು ನಿರ್ಧರಿಸಿದೆ. 2ಬಿಯಲ್ಲಿದ್ದ ಮುಸ್ಲಿಂ ಸಮುದಾಯವನ್ನು ಶೇ.10ರಷ್ಟು ಮೀಸಲಾತಿ ಇರುವ ಆರ್ಥಿಕವಾಗಿ ಹಿಂದುಳಿದ ವರ್ಗ(EWS) ಕೋಟಾಕ್ಕೆ ಸ್ಥಳಾಂತರಿಸುತ್ತಿರುವುದಾಗಿ ಘೋಷಣೆ ಮಾಡಿದೆ. ರಾಜ್ಯ ಸರ್ಕಾರದ ಈ ನಿರ್ಧಾರದಿಂದಾಗಿ, 2ಸಿಯಲ್ಲಿರುವ ಒಕ್ಕಲಿಗರಿಗೆ ಶೇ. 4ರಿಂದ ಶೇ. 6ರಷ್ಟು ಹಾಗೂ 2ಡಿಯಲ್ಲಿರುವ ವೀರಶೈವ ಹಾಗೂ ಲಿಂಗಾಯತರಿಗೆ ಶೇ. 5ರಿಂದ ಶೇ. 7ರಷ್ಟು ಮೀಸಲಾತಿ ಹೆಚ್ಚಳವಾಗಲಿದೆ. ಇದರ ವಿರುದ್ಧವೂ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.