ಮೈಸೂರು: ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಲು ಸರ್ಕಾರ ಮುಂದಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಪಠ್ಯಕ್ರಮದಲ್ಲಿ ‘ಸಂವಿಧಾನ ಪಾಠ’ವನ್ನು ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಬಾಲ್ಯದಿಂದಲೇ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಪರಿಚಯಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕಾಗಿ ಶೀಘ್ರದಲ್ಲೇ ಪ್ರತ್ಯೇಕ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದರು.
ಯುವಜನರಿಗಾಗಿ ‘ಯುವ ಸಂಸತ್’ ಕಾರ್ಯಕ್ರಮ ಕೇವಲ ಶಾಲಾ ಮಕ್ಕಳಷ್ಟೇ ಅಲ್ಲದೆ, ಯುವಜನರಲ್ಲಿ ಪ್ರಜಾಪ್ರಭುತ್ವದ ಅರಿವು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಲು ಸರ್ಕಾರ ಹೊಸ ಯೋಜನೆಗಳನ್ನು ರೂಪಿಸಿದೆ. ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ‘ಯುವ ಸಂಸತ್’ಗಳ ರಚನೆ ಹಾಗೂ ಯುವ ನಾಯಕರನ್ನು ಗುರುತಿಸುವ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಿಎಂ ಮಾಹಿತಿ ನೀಡಿದರು.
ಸಂವಿಧಾನದ ಮಹತ್ವದ ಕುರಿತು ಸಿಎಂ ಮಾತಿನ ಪ್ರಮುಖಾಂಶಗಳು:
-
ದೇಶ ನಿರ್ಮಾಣದ ನೀಲನಕ್ಷೆ: ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ ಹಕ್ಕು, ಗೌರವ, ಸ್ವಾತಂತ್ರ್ಯ ಹಾಗೂ ಸಮಾನತೆಯ ರಕ್ಷಾಕವಚ. ಮನೆ ನಿರ್ಮಾಣಕ್ಕೆ ನೀಲನಕ್ಷೆ ಹೇಗೆ ಅಗತ್ಯವೋ, ದೇಶದ ನಿರ್ಮಾಣಕ್ಕೂ ಸಂವಿಧಾನದ ಬುನಾದಿ ಅಷ್ಟೇ ಮುಖ್ಯ.
-
ಪ್ರಶ್ನಿಸುವ ಹಕ್ಕು ನೀಡಿದ ಪವಿತ್ರ ಗ್ರಂಥ: ಸಂವಿಧಾನ ಕೇವಲ ಮುಖ್ಯಮಂತ್ರಿ, ಸಚಿವರು, ಶಾಸಕರು ಅಥವಾ ಪಂಚಾಯಿತಿ ಸದಸ್ಯರಿಗೆ ಮಾತ್ರ ಅಧಿಕಾರ ನೀಡಿಲ್ಲ. ಬದಲಾಗಿ, ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ಧೈರ್ಯವನ್ನೂ ಸಾಮಾನ್ಯ ಜನರಿಗೆ ನೀಡಿದೆ. ಶ್ರೀಮಂತರು-ಬಡವರು ಎಂಬ ತಾರತಮ್ಯವಿಲ್ಲದೆ ಎಲ್ಲರಿಗೂ ಒಂದೇ ಕಾನೂನು, ಒಂದೇ ನ್ಯಾಯ ಎಂಬ ತತ್ವವನ್ನು ಇದು ಎತ್ತಿಹಿಡಿದಿದೆ.
-
40 ವರ್ಷಗಳ ಸೇವೆಗೆ ಸಂವಿಧಾನವೇ ಸ್ಫೂರ್ತಿ: “ನಾನು ರೈತನ ಮಗನಾಗಿ, ಜನರ ಪ್ರಜಾಸೇವಕನಾಗಿ ಇಂದು ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ನಿಂತಿದ್ದೇನೆ. ಕಳೆದ 40 ವರ್ಷಗಳಿಂದ ವಿವಿಧ ಹಂತಗಳಲ್ಲಿ ಜನಸೇವೆ ಮಾಡಿಕೊಂಡು ಬಂದಿದ್ದೇನೆ. ನನ್ನ ಬದುಕಿಗೆ ಶಕ್ತಿ, ಧೈರ್ಯ ಮತ್ತು ಪ್ರೇರಣೆ ನೀಡಿರುವುದೇ ಸಂವಿಧಾನ,” ಎಂದು ಡಿ.ಕೆ. ಶಿವಕುಮಾರ್ ಭಾವುಕರಾಗಿ ನುಡಿದರು.
-
ಸಾಮಾಜಿಕ ನ್ಯಾಯದ ಬದ್ಧತೆ: 2013ರಿಂದ 2018ರವರೆಗೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡುವ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದನ್ನು ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು.
ಕರ್ನಾಟಕದ ಮಹನೀಯರ ಕೊಡುಗೆ ಸ್ಮರಣೆ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಕೇವಲ ಸರ್ಕಾರದ ಮೇಲಷ್ಟೇ ಇಲ್ಲ, ಪ್ರತಿಯೊಬ್ಬ ಭಾರತೀಯನ ಮೇಲೂ ಇದೆ ಎಂದ ಅವರು, ಸಂವಿಧಾನ ರಚನೆಯ ಸಂದರ್ಭದಲ್ಲಿ ಕರ್ನಾಟಕದ 12 ಮಂದಿ ಮಹನೀಯರು ಪ್ರಮುಖ ಪಾತ್ರ ವಹಿಸಿದ್ದರು. ಕೆ.ಸಿ. ರೆಡ್ಡಿ, ಎಸ್. ನಿಜಲಿಂಗಪ್ಪ ಹಾಗೂ ಕೆಂಗಲ್ ಹನುಮಂತಯ್ಯ ಸೇರಿದಂತೆ ರಾಜ್ಯದ ನಾಯಕರ ಕೊಡುಗೆ ಅವಿಸ್ಮರಣೀಯ ಎಂದು ಗೌರವ ಸಲ್ಲಿಸಿದರು.
