ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿ (Media Adviser) ಹಿರಿಯ ಪತ್ರಕರ್ತರ ಕೆವಿ ಪ್ರಭಾಕರ್ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಅಧಿಕಾರಿಗಳನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಪ್ರತ್ಯೇಕ ಆದೇಶ ಹೊರಡಿಸಿದೆ.
ಸಿದ್ದರಾಮಯ್ಯ ಅವರು ತಮ್ಮ ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಾಧ್ಯಮ ಸಮನ್ವಯಕರಾಗಿದ್ದ ಹಿರಿಯ ಪತ್ರಕರ್ತ ಕೆ ವಿ ಪ್ರಭಾಕರ್ ಅವರನ್ನ ಈ ಬಾರಿ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.
ಅಲ್ಲದೆ, ಕೆ ವಿ ಪ್ರಭಾಕರ್ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನವನ್ನೂ ಕೂಡಾ ನೀಡಲಾಗಿದೆ. ರಾಜ್ಯ ಸರ್ಕಾರದ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ ರಜನೀಶ್ ಗೋಯಲ್ ಅವರನ್ನು ಮುಖ್ಯಮಂತ್ರಿಯವರ ಆಪರ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮವರ್ತಿ ಪ್ರಭಾರದಲ್ಲಿರಿಸಿ ನೇಮಕ ಮಾಡಲಾಗಿದೆ.
ಪೌರಾಡಳಿತ ಇಲಾಖೆಯ ಜಂಟಿ ನಿರ್ದೇಶಕ ಬಿ ಶಿವಸ್ವಾಮಿ ಅವರನ್ನು ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಪ್ರತಿಪಕ್ಷ ನಾಯಕರಾಗಿದ್ದ ಸಂದರ್ಭದಲ್ಲಿ ಆಪ್ತ ಕಾರ್ಯದರ್ಶಿಯಾಗಿದ್ದ ಕರ್ನಾಟಕ ಆಡಳಿತ ಸೇವೆಯ ಆಯ್ಕೆ ಶ್ರೇಣಿ ಅಧಿಕಾರಿ ಡಾ ವೆಂಕಟೇಶಯ್ಯ ಅವರನ್ನು ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯ ಸಂದರ್ಭದಲ್ಲಿ ವಿಶೇಷಾಧಿಕಾರಿಯಾಗಿದ್ದ ಎಂ ವೆಂಕಟೇಶ್ ಅವರನ್ನು ಮುಖ್ಯಮಂತ್ರಿಯವರ ಅಧಿಕಾರದ ಅವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮುಖ್ಯಮಂತ್ರಿಯವರ ವಿಶೇಷಾಧಿಕಾರಿಯಾಗಿ ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಲಾಗಿದೆ.
2013ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ ಹಿರಿಯ ಪತ್ರಕರ್ತ ಅಮಿನ್ ಮಟ್ಟು ಅವರು ಮಾಧ್ಯಮ ಸಲಹೆಗಾರರಾಗಿದ್ದರು. ಆಗ ಕೆವಿ ಪ್ರಭಾಕರ್ ಅವರು ಮಾಧ್ಯಮ ಸಮನ್ವಯಕರಾಗಿ ಕೆಲಸ ಮಾಡಿದ್ದರು. ಕಳೆದ ಐದು ವರ್ಷಗಳಿಂದ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರಿಗೆ ಕೆವಿ ಪ್ರಭಾಕರ್ ಅವರು ಸಹಾಯಕರಾಗಿ ಕೆಲಸ ಮಾಡಿದ್ದರು. ಇದೀಗ ಅವರನ್ನು ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.
ಕಳೆದ ಶನಿವಾರ (ಮೇ 20) ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದಿದ್ದ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.