ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 3 ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ. ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯದ ನಂತರ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಸರ್ಕಾರ ರಚಿಸಿದ ನಂತರ ಇದು ಪ್ರಧಾನಿಯೊಂದಿಗಿನ ಅವರ ಮೊದಲ ಭೇಟಿಯಾಗಿದೆ.
ಸಿದ್ದರಾಮಯ್ಯ ಆಗಸ್ಟ್ 3 ರಂದು ಬೆಳಗ್ಗೆ 11 ಗಂಟೆಗೆ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. ಅದೇ ದಿನ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಅದು ತಿಳಿಸಿದೆ.
ಅಲ್ಲದೆ, 2024 ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಆಗಸ್ಟ್ 2 ರಂದು ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಸಚಿವರೊಂದಿಗೆ ಪಕ್ಷದ ವರಿಷ್ಠರನ್ನು ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ. ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಇತರರು ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ.