Updated By: Priyalachhi
ಬೆಂಗಳೂರು: ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ. ಕ್ರೀಡೆಯಲ್ಲಿ ಗೆಲುವು ಸೋಲಿಗಿಂತ ಭಾಗವಹಿಸುವಿಕೆ ಅತೀ ಮುಖ್ಯ ಎಂದು ಹೇಳಿದರು.
ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ.3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ.2 ರಷ್ಟು ಹುದ್ದೆಗಳನ್ನು ನೀಡಲಾಗುತ್ತದೆ.
