ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆ ತಯಾರಿ ಹಾಗೂ ರಾಜ್ಯ ಸರ್ಕಾರದ ಪಂಚಖಾತ್ರಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವುದು ಹಾಗೂ ಇತರ ಮಹತ್ವದ ವಿಚಾರಗಳನ್ನು ಇಂದು ನಡೆದ ಕಾಂಗ್ರೆಸ್ನ ಸರ್ವ ಸದಸ್ಯರ ಸಭೆಯಲ್ಲಿ ಚರ್ಚಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಪಕ್ಷದ ಭಾರತ್ ಜೋಡೋ ಭವನದಲ್ಲಿ ನಡೆದ ಸಭೆಯಲ್ಲಿ ಹಲವಾರು ಮಹತ್ವದ ವಿಚಾರಗಳ ಕುರಿತು ಸಮಾಲೋಚನೆ ನಡೆಸಲಾಗಿದೆ.
ಅದರಲ್ಲೂ ಪಂಚಖಾತ್ರಿ ಯೋಜನೆಗಳ ಜಾರಿ ಪ್ರಮುಖವಾಗಿದ್ದು, ಇದೇ ತಿಂಗಳು ಉದ್ಘಾಟನೆಯಾಗುವ ಗೃಹಲಕ್ಷ್ಮಿ ಯೋಜನೆಯನ್ನು ಮನೆಮನೆಯ ಕಾರ್ಯಕ್ರಮವನ್ನಾಗಿ ತಲುಪಿಸಲು ಸೂಚನೆ ನೀಡಲಾಗಿದೆ. ಪ್ರತಿಯೊಬ್ಬರೂ ಈ ಕಾರ್ಯಕ್ರಮದ ಯಶಸ್ವಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ಕಾರ್ಯಕರ್ತರಿಗೆ ಸಲಹೆ ನೀಡಲಾಗಿದೆ.
ಕೆಪಿಸಿಸಿಯ ರಾಜ್ಯ ಘಟಕಗಳ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಪ್ರಮುಖರು, ಜಿಲ್ಲೆ ಮತ್ತು ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಬೂತ್ ಮಟ್ಟದಿಂದಲೂ ಅಭಿಪ್ರಾಯ ಸಂಗ್ರಹಿಸಬೇಕು ಎಂದು ವರಿಷ್ಠರು ಸೂಚನೆ ನೀಡಿದ್ದಾರೆ.
ಮುಂದಿನ ಚುನಾವಣೆಯಲ್ಲಿ 22 ಸ್ಥಾನಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇರುವುದರಿಂದ ಎಲ್ಲರೂ ಸಂಘಟನಾತ್ಮಕವಾಗಿ ಕೆಲಸ ಮಾಡಬೇಕು. ಒಳ ಬೇಗುದಿಗಳನ್ನು ಮರೆತು ಒಟ್ಟಾಗಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಯಾರೇ ಪಕ್ಷವಿರೋ ಚಟುವಟಿಕೆಗಳಲ್ಲಿ ಭಾಗವಹಿಸಿದರೂ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಪಕ್ಷದ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಪ್ರತೀ ಹಂತದಲ್ಲೂ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಬೂತ್ ಮಟ್ಟದಲ್ಲಿ ಯಾರು, ಎಷ್ಟು ಮತ ತಂದುಕೊಟ್ಟಿದ್ದಾರೆ ಎಂಬುದನ್ನು ಆಧರಿಸಿ ಮುಂದಿನ ದಿನಗಳಲ್ಲಿ ಅವರಿಗೆ ಪಕ್ಷದಲ್ಲಿ ಸ್ಥಾನಮಾನ ನಿರ್ಧಾರವಾಗುತ್ತದೆ. ಪ್ರಭಾವಿಗಳ ಲಾಬಿ ಬಳಸಿ ಅವಕಾಶ ಗಿಟ್ಟಿಸಲು ಸಾಧ್ಯವಿಲ್ಲ. ಹೀಗಾಗಿ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಆದ್ಯತೆ ನೀಡುವಂತೆ ಚರ್ಚಿಸಲಾಗಿದೆ.
ಪಂಚಖಾತ್ರಿ ಯೋಜನೆಗಳ ವಿಷಯದಲ್ಲಿ ವಿರೋಧಪಕ್ಷಗಳು ಭಾರೀ ಅಪಪ್ರಚಾರ ನಡೆಸುತ್ತಿವೆ. ಶಕ್ತಿ ಯೋಜನೆಯನ್ನು ಪುರುಷ ವಿರೋ ಎಂದು ಬಿಂಬಿಸಲಾಗುತ್ತಿದೆ. ಅನ್ನಭಾಗ್ಯ ಯೋಜನೆಯನ್ನು ಸೋಮಾರಿಗಳಿಗೆ ನೆರವು ನೀಡುವುದು ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ವಿಷಯದಲ್ಲೂ ಕೊಂಕುಗಳನ್ನಾಡಲಾಗುತ್ತಿದೆ. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರು ಎಚ್ಚರಿಕೆಯಿಂದಿದ್ದು, ಅಪಪ್ರಚಾರಗಳಿಗೆ ಪ್ರತ್ಯುತ್ತರಿಸಬೇಕೆಂದು ವರಿಷ್ಠರು ಸೂಚನೆ ನೀಡಿದ್ದಾರೆ.