ಲೋಕಸಭೆ ಚುನಾವಣೆಗೆ ನಿಖಿಲ್ ಸ್ಪರ್ಧಿಸಲ್ಲ ಎಂದ ಕುಮಾರಸ್ವಾಮಿ: ಕುಟುಂಬ ರಾಜಕಾರಣಕ್ಕೆ ಇತಿಶ್ರೀ?
Kumaraswamy said that Nikhil will not contest for the Lok Sabha elections: Itishri for family politics?
ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ಬೆಂಗಳೂರು, ಆಗಸ್ಟ್ 28: ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಸೋಲನ್ನು ಅನುಭವಿಸಿದೆ. ಕೇವಲ 19 ಸ್ಥಾನಗಳನ್ನು ಪಡೆಯುವ ಮೂಲಕ ಭಾರೀ ಆಘಾತ ಅನುಭವಿಸಿದೆ. ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರು ರಾಮನಗರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕುಟುಂಬ ರಾಜಕಾರಣಕ್ಕೆ ಇತಿಶ್ರೀ ಹಾಡಲು ಎಚ್ಡಿಕೆ ಮುಂದಾಗಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.
ಕುಟುಂಬ ರಾಜಕಾರಣದ ಆಪಾದನೆಯಿಂದ ಹೊರಬರಲು ಎಚ್ಡಿ ಕುಮಾರಸ್ವಾಮಿ ಯತ್ನಿಸುತ್ತಿದ್ದಾರೆ ಎಂದು ಶಂಕೆಗಳು ವ್ಯಕ್ತವಾಗಿದೆ. ಇತ್ತೀಚೆಗೆ ರಚನೆಯಾದ 21 ಸದಸ್ಯರ ಕೋರ್ ಕಮಿಟಿಯಿಂದ ಕುಟುಂಬ ಸದಸ್ಯರನ್ನು ಎಚ್ಡಿಕೆ ಹೊರಗಿಟ್ಟಿದ್ದಾರೆ. ಇಷ್ಟೇ ಅಲ್ಲದೇ, ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಈ ವಿಚಾರವಾಗಿ ಮಂಡ್ಯದಲ್ಲಿ ಸೋಮವಾರ ಮಾತನಾಡಿರುವ ಅವರು, ಮುಂದಿನ ಐದು ವರ್ಷಗಳ ಕಾಲ ನಿಖಿಲ್ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
‘ಮಂಡ್ಯ ಲೋಕಸಭಾ ಅಭ್ಯರ್ಥಿ ಆಯ್ಕೆಗೆ ಇನ್ನೂ ಸಮಯವಿದೆ. ಇನ್ನು ನಿಖಿಲ್ ವಿಚಾರಕ್ಕೆ ಬಂದರೆ ರಾಜಕೀಯ ಬಿಟ್ಟು ಚಿತ್ರರಂಗದ ಕಡೆ ಗಮನ ಹರಿಸುವಂತೆ ಸಲಹೆ ನೀಡಿದ್ದೇನೆ. ಈಗಾಗಲೇ ಎರಡು ಚುನಾವಣೆಗಳಲ್ಲಿ ಆತ ಸೋತಿದ್ದಾನೆ. ಕಳೆದ ಬಾರಿ ಮಂಡ್ಯದಲ್ಲಿ ಸ್ಪರ್ಧಿಸಬೇಡ ಎಂದು ಹೇಳಿದ್ದೆ. ಆತನ ಸ್ಪರ್ಧಿಸಲು ಸಿದ್ದನಿರಲಿಲ್ಲ. ಆದರೆ, ಪಕ್ಷದ ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಸ್ಪರ್ಧೆ ಮಾಡಬೇಕಾಯಿತು’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಗೆಲುವು ಮತ್ತು ಸೋಲು ನಮ್ಮ ಜೀವನದ ಭಾಗವಾಗಿದೆ. ಸದ್ಯದ ಸ್ಥಿತಿಯಲ್ಲಿ ಆತನಿಗೆ ಮನ್ನಣೆ ಸಿಕ್ಕಿರುವ ಕ್ಷೇತ್ರದಲ್ಲಿಯೇ ಮುಂದುವರಿಯುವಂತೆ ತಿಳಿಸಿದ್ದೇನೆ. ಏನೇ ಆದರೂ ಮುಂದಿನ ಐದು ವರ್ಷಗಳಲ್ಲಿ ಆತ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಚ್ಡಿಕೆ, ಅದರ ಬಗ್ಗೆ ನಿರ್ಧರಿಸಲು ಇನ್ನೂ ಸಮಯವಿದೆ ಎಂದು ಹೇಳಿದ್ದಾರೆ.