ರಾಜಕೀಯರಾಜ್ಯ

ಇಡಿಯಿಂದ ಕೇಜ್ರಿವಾಲ್ ವಿಚಾರಣೆ; ಬಂಧನ ಸಾಧ್ಯತೆ: ‘ಸುಪ್ರೀಂ’ ಮೊರೆ ಹೋದ ದೆಹಲಿ ಸಿಎಂ, ಭದ್ರತೆ ಹೆಚ್ಚಳ

Kejriwal interrogated by ED; Arrest likely: Delhi CM who went to 'Supreme', increased security

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ ಮತ್ತೊಂದು ಸಮನ್ಸ್ ಜಾರಿ ಮಾಡಿ, ವಿಚಾರಣೆಗೆ ಒಳಪಡಿಸಿದ್ದು, ಯಾವುದೇ ಕ್ಷಣದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸುವ ಸಾಧ್ಯತೆ ಇದೆ.

ಈ ಮಧ್ಯೆ, ಅರವಿಂದ್ ಕೇಜ್ರಿವಾಲ್ ಅವರು ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಸಿಎಂ ಕೇಜ್ರಿವಾಲ್ ಗೆ ಯಾವುದೇ ಮಧ್ಯಂತರ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಕೆಲವೇ ಗಂಟೆಗಳ ನಂತರ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

ಬಲವಂತದ ಕ್ರಮದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಇಂದು ಸಂಜೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದ ಇಡಿ ಅಧಿಕಾರಿಗಳ ತಂಡ, ಮತ್ತೊಂದು ಸಮನ್ಸ್ ಹಾಗೂ ಸರ್ಚ್ ವಾರಂಟ್ ಅನ್ನು ಜಾರಿ ಮಾಡಿದ್ದಾರೆ.

ಇಡಿ ಅಧಿಕಾರಿಗಳ ತಂಡ ದೆಹಲಿ ಸಿಎಂ ನಿವಾಸಕ್ಕೆ ಆಗಮಿಸಿದ ಕಾರಣ, ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ ಮತ್ತು ಸಿವಿಲ್ ಲೈನ್ಸ್‌ನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಸಹಾಯಕ ಪೊಲೀಸ್ ಆಯುಕ್ತರ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ದೆಹಲಿ ಸಿಎಂ ನಿವಾಸದ ಬಳಿ ಮತ್ತು ಇಡಿ ಕಚೇರಿ ಬಳಿ ದೆಹಲಿ ಪೊಲೀಸ್ ಸಿಬ್ಬಂದಿಯೊಂದಿಗೆ RAF ಮತ್ತು CRPF ಪಡೆಗಳನ್ನು ನಿಯೋಜಿಸಲಾಗಿದೆ.

ಸಿಎಂ ನಿವಾಸದ ಬಳಿ ಮತ್ತು ಇಡಿ ಕಚೇರಿ ಬಳಿ ಎಎಪಿ ಕಾರ್ಯಕರ್ತರು ಸೇರುವ ನಿರೀಕ್ಷೆ ಇರುವು ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಡಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೋರಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ...

Back to top button
>