- ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಶನಿವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಏಪ್ರಿಲ್ 17 ರಂದು ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ, ಶಕ್ತಿ ಯೋಜನೆ ಮತ್ತು ಅನ್ನಭಾಗ್ಯ ಎಂಬ ಐದು ಗ್ಯಾರಂಟಿಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಹೇಳಿರುವುದಾಗಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಬರೆದ ಪತ್ರದಲ್ಲಿ ಕಾಂಗ್ರೆಸ್ ಆರೋಪಿಸಿದೆ.
ಐದು ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ ಮತ್ತು ಕರ್ನಾಟಕದಲ್ಲಿ ಮತದಾರರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸದಿದ್ದರೆ, ಲೋಕಸಭೆ ಚುನಾವಣೆಯ ನಂತರ ಐದು ಗ್ಯಾರಂಟಿಗಳನ್ನು ನಿಲ್ಲಿಸುತ್ತಾರೆ. ಅಲ್ಲದೆ ಲೋಕಸಭೆ ಚುನಾವಣೆಯ ನಂತರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ ಎಂದು ಕೆಪಿಸಿಸಿ ಪತ್ರದಲ್ಲಿ ಆರೋಪಿಸಿದೆ.
ವಿಜಯೇಂದ್ರ ಅವರು ಕರ್ನಾಟಕದ ಮತದಾರರಿಗೆ ಅದರಲ್ಲೂ ಮುಖ್ಯವಾಗಿ ಮಂಡ್ಯ ಮತ್ತು ಚಿಕ್ಕಬಳ್ಳಾಪುರದ ಮತದಾರರಿಗೆ ಬೆದರಿಕೆ ಹಾಕಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
“ಬಿವೈ ವಿಜಯೇಂದ್ರ ಅವರ ಹೇಳಿಕೆಯು ಚುನಾವಣಾ ನೀತಿ ಸಂಹಿತೆ, ಪ್ರಜಾಪ್ರತಿನಿಧಿ ಕಾಯ್ದೆ 1951 ರ ನಿಬಂಧನೆಗಳು ಮತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ” ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ.
ಕರ್ನಾಟಕದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ಹಿತದೃಷ್ಟಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಕೆಪಿಸಿಸಿ ಚುನಾವಣಾ ಸಮಿತಿ ಒತ್ತಾಯಿಸಿದೆ.