Updated By: Priyalachhi
ರಾಮನಗರ: ನಾನು ಆತ್ಮಸಾಕ್ಷಿಯನ್ನು ನಂಬಿದ್ದೇನೆ. ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು. ಪಕ್ಷಕ್ಕೆ ಮುಜುಗರ ತರುವುದು, ಪಕ್ಷವನ್ನು ದುರ್ಬಲಗೊಳಿಸುವುದು ನನಗೆ ಇಷ್ಟವಿಲ್ಲ. ಪಕ್ಷ ಹಾಗೂ ಕಾರ್ಯಕರ್ತರಿದ್ದರೆ ನಾವು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಲ್ಲಿ ಇಂದು ಮಾಧ್ಯಮವರೊಂದಿಗೆ ಅವರು ಮಾತನಾಡಿದರು.
ಅದು ಗುಟ್ಟಿನ ವಿಚಾರ, ಬಹಿರಂಗಪಡಿಸಲಾರೆ: ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ತೆರಳಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಅಧಿಕಾರ ಹಸ್ತಾಂತರದ ಬಗ್ಗೆ ಚರ್ಚೆ ನಡೆಸಲಿದ್ದಾರೆಯೇ? ಎಂದು ಕೇಳಿದಾಗ, ಈ ವಿಚಾರ ನನಗೆ ಗೊತ್ತಿಲ್ಲ. ಇದು ನಮ್ಮ ಐದಾರು ಜನರ ನಡುವಿನ ಗುಟ್ಟಿನ ವಿಚಾರ. ಇದನ್ನು ನಾನು ಬಹಿರಂಗ ಮಾಡುವುದಿಲ್ಲ ಎಂದರು.
ಇದೇ ವೇಳೆ, ಸಿಎಂ ಹಿರಿಯ ನಾಯಕರು. ಅವರು ನಮ್ಮ ಪಕ್ಷದ ಆಸ್ತಿ. ಅವರು ಸಿಎಂ ಆಗಿ ಏಳೂವರೆ ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ. ಮುಂದಿನ ಬಜೆಟ್ ಅನ್ನು ಅವರೇ ಮಂಡಿಸುವುದಾಗಿ ಹೇಳಿದ್ದಾರೆ. ಬಹಳ ಸಂತೋಷ. ವಿರೋಧ ಪಕ್ಷದ ನಾಯಕರಾಗಿಯೂ ಅವರು ಶ್ರಮಿಸಿದ್ದಾರೆ. ಪಕ್ಷ ಕಟ್ಟಿದ್ದಾರೆ. ನಾವೆಲ್ಲರೂ ಸೇರಿ 2028 ಹಾಗೂ 2029ರ ಚುನಾವಣೆ ಗುರಿಯತ್ತ ಗಮನ ಹರಿಸಬೇಕು ಎಂದು ಹೇಳಿದರು.
ಅಧಿಕಾರ ಹಂಚಿಕೆ ಒಪ್ಪಂದ ಆಗಿತ್ತೇ? ಎಂಬ ಪ್ರಶ್ನೆಗೆ, ನಾನು ಆ ಬಗ್ಗೆ ಏಕೆ ಮಾತನಾಡಲಿ?, ನೀವುಗಳೇ ಏನೇನೋ ಬರೆಯುತ್ತಿದ್ದೀರಿ ಎಂದರು. ಅಧಿಕಾರ ಹಂಚಿಕೆ ವಿಚಾರವಾಗಿ ಬಸವರಾಜ ರಾಯರೆಡ್ಡಿ, ಸದಾನಂದ ಗೌಡರ ಹೇಳಿಕೆಗಳಿಗೆ, ನಾನು ಯಾರ ಹೇಳಿಕೆಗೂ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಅವರ ವಕ್ತಾರನಲ್ಲ ಎಂದು ತಿಳಿಸಿದರು.
ನೀವು ಸಿಎಂ ಆಗಬೇಕೆಂದು ಜನರು ಪೂಜೆ ಮಾಡುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ, ನನಗೆ ಅಧಿಕಾರ ಸಿಗಲಿ ಎಂದು ಈಗ ಪೂಜೆ ಮಾಡುತ್ತಿರುವುದಕ್ಕಿಂತ, ನಾನು ಜೈಲಿಗೆ ಹೋದಾಗ ನನ್ನ ತಾಯಂದಿರು, ಯುವಕರು, ಹಿರಿಯರು, ದೇವಾಲಯದ ಅರ್ಚಕರು ಮಾಡಿದ ಪ್ರಾರ್ಥನೆಯನ್ನು ಮರೆಯಲು ಸಾಧ್ಯವಿಲ್ಲ. ಬಿಜೆಪಿ ಅವಧಿಯಲ್ಲಿ ನಾನು ಜೈಲಿಂದ ಬಿಡುಗಡೆ ಆದಾಗ ಪೊಲೀಸರ ಬೆದರಿಕೆಗೂ ಹಿಂಜರಿಯದೇ ನನ್ನನ್ನು ಜನ ಸ್ವಾಗತಿಸಿದರು. ನಾನು ಜೈಲಲ್ಲಿ ಇದ್ದಾಗ ಕರವೇ ನಾರಾಯಣ ಗೌಡರಿಗೆ ಪ್ರತಿಭಟನೆ ನಡೆಸದಂತೆ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಬೆದರಿಕೆ ಹಾಕಿದ್ದರು. ಕೆಲವು ಸ್ವಾಮೀಜಿಗಳು ಬಂದರು, ಕೆಲವರು ಬರಲಿಲ್ಲ. ಆಗ ಕಟ್ಟಿಕೊಂಡ ಹರಕೆ ಮುಗಿಸಲು ಇನ್ನೂ ನನಗೆ ಆಗುತ್ತಿಲ್ಲ. ಅನೇಕರು ನಾನು ಬಿಡುಗಡೆಯಾಗುವವರೆಗೂ ಕಾಲಿಗೆ ಚಪ್ಪಲಿ ಹಾಕಿರಲಿಲ್ಲ. ನಾನು ಇಂದು ಡಿಸಿಎಂ ಆಗಿದ್ದು, ಪಕ್ಷದ ಅಧ್ಯಕ್ಷನಾಗಿದ್ದೇನೆ. ಕಷ್ಟಕಾಲದಲ್ಲಿದ್ದಾಗ ಮಾಡಿದ ಪ್ರಾರ್ಥನೆ, ಆಗ ಅವರು ನನಗೆ ಆತ್ಮಸ್ಥೈರ್ಯ ತುಂಬಿದ್ದು, ನನಗೆ ಬಹಳ ವಿಶೇಷ ಎಂದು ತಿಳಿಸಿದರು.
ನಿಮ್ಮನ್ನು ಸಿಎಂ ಸ್ಥಾನದಲ್ಲಿ ನೋಡಬೇಕೆಂದು ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲೂ ಜನ ಪಕ್ಷಕ್ಕೆ ಬೆಂಬಲ ನೀಡಿದ್ದಾರಲ್ಲವೇ ಎಂಬುದಕ್ಕೆ, ನಾನು ಚುನಾವಣೆಯ ಸಂದರ್ಭದಲ್ಲಿ ಮಹದೇವಪ್ಪನವರ ಕ್ಷೇತ್ರ ಮಂಡ್ಯ ಸೇರಿದಂತೆ ಎಲ್ಲ ಕಡೆಗಳಲ್ಲಿ ನನ್ನ ಮುಖ ನೋಡಿ ಮತ ಹಾಕಿ ಎಂದೂ ಕೇಳಿದ್ದೇನೆ. ಜನ ನಮ್ಮ ಸಾಮೂಹಿಕ ನಾಯಕತ್ವಕ್ಕೆ ಮತ ಹಾಕಿದ್ದಾರೆ. ನನ್ನೊಬ್ಬನಿಗಾಗಿ ಮತ ಹಾಕಿದ್ದಾರೆ ಎಂದು ನಾನು ಹೇಳುವುದಿಲ್ಲ. 224 ಕ್ಷೇತ್ರಗಳಲ್ಲಿ ನಮಗಿಂತ ನಮ್ಮ ಕಾರ್ಯಕರ್ತರು ಹೆಚ್ಚು ಶ್ರಮ ಹಾಕಿದ್ದಾರೆ ಎಂದು ಹೇಳಿದರು.
