Updated By: Priyalachhi

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ತಂಡ ಐಪಿಎಲ್ ಕಪ್ ಗೆದ್ದ ಹಿನ್ನೆಲೆಯಲ್ಲಿ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಹಮ್ಮಿಕೊಂಡಿದ್ದ ವೇಳೆ ನಡೆದಿದ್ದ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ್ದ ಘಟನೆಯ ತನಿಖೆಗೆ ರಾಜ್ಯ ಸರ್ಕಾರ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಮೈಕಲ್ ಕುನ್ಹಾ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗದ ವರದಿಯನ್ನು ರದ್ದುಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.

ಆಯೋಗ ರಚನೆ ಮಾಡಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್​​ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ.ಸಿಂಗ್ ಮತ್ತು ನ್ಯಾಯಮೂರ್ತಿ ತಾರಾ ವಿತಾಸ್ತಾ ಗಂಜು ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಅಲ್ಲದೆ, ರಾಜ್ಯ ಸರ್ಕಾರದ ನಿಲುವು ಅರ್ಜಿದಾರರಾದ ಡಿಎನ್ಎ ಎಂಟರ್ಟೈನ್ಮೆಂಟ್ ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ತಿಳಿಸಿದ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸುತ್ತಿರುವುದಾಗಿ ಹೇಳಿದೆ. ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಪ್ರಕಟವಾಗಬೇಕಾಕಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮಾಧ್ಯಮಗಳಲ್ಲಿ ಡಿಎನ್ಎ ಮತ್ತು ಅದರ ಪದಾಧಿಕಾರಿಗಳ ಹೆಸರು ಪ್ರಸ್ತಾಪಿಸಿ ಘನತೆಗೆ ಹಾನಿ ಮಾಡಲಾಗಿದೆ. ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ಆಯೋಗವು ವಿಚಾರಣೆಯ ವೇಳೆ ಪಾಟೀಸವಾಲಿಗೆ ಅವಕಾಶ ಮಾಡಿಕೊಟ್ಟಿಲ್ಲ. ಸಂವಿಧಾನದ 21ನೇ ವಿಧಿಯಡಿ ಮಾನಹಾನಿಯಾದರೆ ರಿಟ್ ಅರ್ಜಿ ಸಲ್ಲಿಸಲು ಅವಕಾಶವಿದೆ. ಇದುವರೆಗೂ ಸರ್ಕಾರವು ಸದನದಲ್ಲಿ ನ್ಯಾ.ಕುನ್ಹಾ ವರದಿಯನ್ನು ಮಂಡಿಸಿಲ್ಲ. ಈ ವರದಿಯಲ್ಲಿ ಸಾಕಷ್ಟು ದೋಷಗಳಿವೆ ಎಂದು ತಿಳಿಸಿದ್ದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version