ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಭಾರೀ ಬೆಳವಣಿಗೆಯೊಂದು ನಡೆದಿದ್ದು, ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.
ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ಎರಡನೇ ಬಾರಿಗೆ ದಾಳಿ ನಡೆಸಿದ್ದರು. ಈ ಕಾರ್ಯಾಚರಣೆಯ ವೇಳೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ ಬಳಿಕ ಅವರನ್ನು ವಶಕ್ಕೆ ಪಡೆಯಲಾಗಿದೆ. ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಭ್ರಷ್ಟಾಚಾರ, ಅಕ್ರಮ ಹಣಕಾಸು ವರ್ಗಾವಣೆ ಹಾಗೂ ವ್ಯವಹಾರಗಳ ಕುರಿತು ಇ.ಡಿ ತೀವ್ರ ನಿಗಾ ವಹಿಸಿ ತನಿಖೆ ಮುಂದುವರಿಸಿದೆ.
ಈ ಹಗರಣದ ಜಾಡು ಹಿಡಿದು ಈ ಹಿಂದೆಯೂ ಅವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೀಗ ಎರಡನೇ ದಾಳಿಯ ಬೆನ್ನಲ್ಲೇ ಬಂಧನವಾಗಿರುವುದು ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದು, ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಬಂಧಿತ ಶಿವಶಂಕರಪ್ಪ ಸಾಹುಕಾರ್ ಅವರನ್ನು ಶೀಘ್ರದಲ್ಲೇ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.

